
ಬಂಟ್ವಾಳ: ದೀನ ದುರ್ಬಲರು, ಹಿಂದುಳಿದ ವರ್ಗಗಳ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗದ ಜನರು ಶಿಕ್ಷಣ ವಂತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾದವರು ಎಂದು ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ನಡೆದ ಡಿ. ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.



ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ,
ಜಾನುವಾರು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಗಳಲ್ಲಿದ್ದುಕೊಂಡು ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶೇಷಗಿರಿ ನಾಯಕ್ ಸ್ವಾಗತಿಸಿದರು. ವಾಮದಪದವು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನಿಲಯ ಪಾಲಕ ಆನಂದ ವಂದಿಸಿದರು. ಪಾಣೆಮಂಗಳೂರು ವಸತಿ ನಿಲಯದ ವಿದ್ಯಾರ್ಥಿನಿ ಶ್ರೇಯ ಕಾರ್ಯಕ್ರಮ ನಿರೂಪಿಸಿದರು.
Advertisement







