
ಬಂಟ್ವಾಳ: ತಾಲೂಕಾಡಳಿತ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಗುರುವಾರ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಎಸ್ಜೆಎಸ್ಆರ್ವೈ ಸಭಾಂಗಣದಲ್ಲಿ ಆಚರಿಸಲಾಯಿತು.
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಉಳುವವನೇ ಭೂಮಿಯ ಒಡೆಯ’ ಕಾನೂನನ್ನು ಜಾರಿಗೊಳಿಸುವ ಮೂಲಕ ಬಡವರು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಧೀಮಂತ ನಾಯಕ ಡಿ. ದೇವರಾಜ ಅರಸು ಎಂದು ಹೇಳಿದರು.

ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಪುಟ್ಟಲಕ್ಷ್ಮಮ್ಮ ವಿಶೇಷ ಉಪನ್ಯಾಸ ನೀಡಿ, ಸಾಧಕರು ಚರಿತ್ರೆಯನ್ನು ಸೃಷ್ಟಿಸುತ್ತಾರೆ. ಅಂತಹ ಸಾಧಕರ ಸಾಲಿನಲ್ಲಿ ಡಿ. ದೇವರಾಜ ಅರಸು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಶೇಷಗಿರಿ ನಾಯಕ್ ಸ್ವಾಗತಿಸಿದರು. ವಿನುತಾ ಕಾರ್ಯಕ್ರಮ ನಿರೂಪಿಸಿದರು.
Advertisement







