ಬಂಟ್ವಾಳ: ಇಲ್ಲಿನ ಸಜೀಪಮೂಡ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಕೊಳ್ನಾಡು, ಸಾಲೆತ್ತೂರು ಇವರ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆಯಲಿರುವ ೧೪ನೇ ವರ್ಷದ ಚಿಗುರು ವ್ಯಕ್ತಿತ್ವ ವಿಕಸನ ಶಿಬಿರಕ್ಕೆ ಸಜೀಪ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಲಯನ್ಸ್ ಕ್ಲಬ್ ಕೊಳ್ನಾಡು, ಸಾಲೆತ್ತೂರಿನ ಅಧ್ಯಕ್ಷ ಮನೋರಂಜನ್ ಕರೈ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವ್ಯಕ್ತಿತ್ವ ವಿಕಸನ ಶಿಬಿರ ಸಹಕಾರಿಯಾಗಲಿದೆ. ಈ ಅವಕಾಶವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ ವಿದ್ಯಾರ್ಥಿಗಳು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು, ಅದು ವ್ಯಕ್ತಿತ್ವ ವಿಕಸನಕ್ಕೆ ಪೂರಕ. ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಚುಟುಕು ಸಾಹಿತ್ಯ ಮಹತ್ವದ ಪಾತ್ರ ವಹಿಸಿತ್ತು ಎಂದು ತಿಳಿಸಿದರು.
ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಸಭಾಧ್ಯಕ್ಷತೆ ವಹಿಸಿದ್ದರು.
ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತಾರಾನಾಥ ಬೋಳಾರ್, ಪತ್ರಕರ್ತ ಸಂದೀಪ್ ಸಾಲ್ಯಾನ್, ಸಿದ್ದಕಟ್ಟೆ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ರಮಾನಂದ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು, ದಿನಕರ್, ದಾಮೋದರ್, ಲಯನ್ಸ್ ಕ್ಲಬ್ ಸದಸ್ಯರಾದ ಗೋಪಾಲ್ ಆಚಾರ್, ಪುರುಷೋತ್ತಮ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸುರೇಖಾ, ಸಾಹಿತಿ ಹರೀಶ್ ಸುಲಾಯ ಒಡ್ಡಂಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್.ಸ್ವಾಗತಿಸಿದರು. ಶಿಬಿರ ಸಂಯೋಜಕ ಬಾಲಕೃಷ್ಣ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು, ಶಿಕ್ಷಕರಾದ ಗಣೇಶ್ ಧನ್ಯವಾದವಿತ್ತರು. ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಸಜೀಪಮೂಡದಲ್ಲಿ “ಚಿಗುರು” ವ್ಯಕ್ತಿತ್ವ ವಿಕಸನ ಶಿಬಿರಕ್ಕೆ ಚಾಲನೆ
