ಬಂಟ್ವಾಳ: ಕೋವಿಡ್ 19ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರ ನೇತೃತ್ವದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಜನರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು. ಕಳೆದ ಮೂರು ದಿನಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸುಮಾರು 82 ಮಂದಿಗೆ ದಂಡ ವಿಧಿಸಲಾಗಿದ್ದು,8,800 ರೂ.ದಂಡ ವಸೂಲಿ ಮಾಡಲಾಗಿದ್ದು, ಇದೇ ವೇಳೆ ಮಾಸ್ಕ್ ಇಲ್ಲದವರಿಗೆ ಮಾಸ್ಕ್ ನ್ನು ಕೂಡ ವಿತರಿಸಲಾಗಿದೆ ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ. ಪುರಸಭಾ ವ್ಯಾಪ್ತಿಯ ಬಂಟ್ಬಾಳ ಕಸ್ಬಾ,ಬಿ.ಸಿ.ರೋಡ್ ಹಾಗೂ ಪಾಣೆಮಂಗಳೂರು,ಮೆಲ್ಕಾರ್ ಪರಿಸರದಲ್ಲಿ ವಾಣಿಜ್ಯ ಸಂಕೀರ್ಣ, ಹೊಟೇಲ್,ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ,ಮಾಸ್ಕ್ ಧರಿಸದವರನ್ನು ಗುರುತಿಸಿ ದಂಡ ವಿಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಮುಖ್ಯಾಧಿಕಾರಿಯವರು ಸಾರ್ವಜನಿಕರು ಸಂಚರಿಸುವ ವೇಳೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು,ಮಾಸ್ಕ್ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಎಲ್ಲಾ ತರದ ಉದ್ದಿಮೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೆಲಸ ನಿರ್ವಹಿಸುವುದು,ಅವರ ಆರೋಗ್ಯ ತಪಾಸಣೆಯನ್ನು ನಡೆಸುವುದು,ಹಾಗೆಯೇ ಅಂಗಡಿಗೆ ಬರುವ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸುವುದು,ಅಂಗಡಿಯ ಮುಂಭಾಗ ಸ್ವಯಂಚಾಲಿತ ಸ್ಯಾನಿಟೈಸರ್ ನ್ನು ಉಪಯೋಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.ಈ ಷರತ್ ಉಲ್ಲಂಘಿಸಿದಲ್ಲಿ ಮೊದಲಬಾರಿಗೆ 1000 ರೂ.2 ನೇ ಬಾರಿಗೆ 2000 ರೂ.ಹಾಗೂ ಮೂರನೇ ಬಾರಿಗೆ 3000 ರೂ.ದಂಡ ವಿಧಿಸಿ ಎಚ್ಚರಿಕೆ ನೀಡಲು ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.ಈ ಬಗ್ಗೆ ಎಚ್ಚರಿಕಾ ಪ್ರಕಟಣೆಯನ್ನು ಎಲ್ಲಾ ಅಂಗಡಿಗಳಿಗೆ ವಿತರಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ.