ಬಂಟ್ವಾಳ: ಕರಾವಳಿಯಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿತ್ತು, ಇಲ್ಲಿ ಮತ್ತೆ ಪಕ್ಷ ಬಲವರ್ಧನೆ ಮಾಡಬೇಕು, ಅದರ ಜೊತೆಗೆ ಇಡೀ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಆರಂಭಿಸಬೇಕೆನ್ನುವ ತೀರ್ಮಾನದಂತೆ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶವನ್ನು ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್ ಹೇಳಿದರು.
ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ಜ.6ರಂದು ನಡೆಯಲಿರುವ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಿದ್ಧತೆಯನ್ನು ವೀಕ್ಷಿಸಲು ಸೋಮವಾರ ಬಂಟ್ವಾಳಕ್ಕೆ ಆಗಮಿಸಿದ್ದ ಅವರು ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಸಚಿವ ಬಿ. ರಮನಾಥ ರೈ ಹಾಗೂ ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ಅವರ ವಿನಂತಿಯ ಮೇರೆಗೆ ಸಮ್ಮೇಳನಕ್ಕೆ ಕರಾವಳಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಮುಖರಾದ ಎಸ್.ಆರ್. ಪಾಟೀಲ್ ಸಹಿತ ಹಲವು ನಾಯಕರು ಉಪಸ್ಥಿತಲಿರಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಪಕ್ಷದ ಶಾಸಕರು, ಮಾಜಿ ಶಾಸಕರು, ಸಂಸದರು, ಮತ್ತಿತರರು ಸಮಾವೇಷದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ್ಯಂತ ಪಕ್ಷ ಸಂಘಟನೆ ಹಾಗೂ ಮುಂದಿನ ಹೋರಾಟದ ರೂಪುರೇಷೆಯನ್ನು ಸಿದ್ಧಪಟ್ಟಿಸುವ ನಿಟ್ಟಿನಲ್ಲಿ ಈ ಸಮಾವೇಷವನ್ನು ಹಮ್ಮಿಕೊಳ್ಳಲಾಗಿದೆ, ಪ್ರತಿ ಪಂಚಾಯತಿ ಹಾಗೂ ಬೂತ್ಗಳಲ್ಲಿ ಪಕ್ಷ ಸಂಘಟಿಸಿ ಆ ಮೂಲಕ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಕೆಲಸವನ್ನು ಈ ವರ್ಷ ಕೆಲಸ ಮಾಡಲಿದ್ದೇವೆ. ಈ ಸಭೆಯಲ್ಲಿ ಇನ್ನಷ್ಟು ವಿಚಾರಗಳು ಚರ್ಚೆಗೆ ಬರಲಿದೆ ಎಂದು ತಿಳಿಸಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.