ಬಂಟ್ವಾಳ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಜೆಸಿಐ ಬಂಟ್ವಾಳ ಪ್ರತೀ ವರ್ಷವೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲೂಕಿನ ವಿವಿಧೆಡೆಗಳಲ್ಲಿ ನಡೆಸಿಕೊಂಡು ಬರುತ್ತಿದ್ದು ಉಚಿತವಾಗಿ ನೀಡುವ ಆರೋಗ್ಯ ಸೇವೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದರಿಂದ ರೋಗ ಮುಕ್ತವಾದ ಜೀವನ ನಡೆಸಲು ಸಾಧ್ಯವಿದೆ ಎಂದು ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ, ಜೆಸಿಐ ಬಂಟ್ವಾಳ, ಎ.ಜೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ ಬಿ. ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಪುರಸಭಾ ಸದಸ್ಯೆ ಜಯಂತಿ ವಸಂತ ರಾಜೀವಪಲ್ಕೆ, ಮಾಝಿ ಸದಸ್ಯ ಭಾಸ್ಕರ ಟೈಲರ್, ಎ.ಜೆ. ಆಸ್ಪತ್ರೆಯ ವೈದ್ಯ ಡಾ. ಸುಶಾಂತ್ ಉಪಸ್ಥಿತರಿದ್ದರು. ಪ್ರಾಧ್ಯಪಕ ಸತೀಶ್ ಗಟ್ಟಿ ಸ್ವಾಗತಿಸಿದರು, ಉಪನ್ಯಾಸಕಿ ಶಶಿಕಲಾ ಸನ್ಮಾನ ಪತ್ರ ವಾಚಿಸಿದರು, ಚಿತ್ರ ಕಾರ್ಯಕ್ರಮ ನಿರೂಪಿಸಿದರು. ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಿದ್ದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.