ಬಂಟ್ವಾಳ: ಇಲ್ಲಿನ ಪುರಸಭೆಯ ಎರಡನೇ ಮಹಡಿಯಲ್ಲಿ ನೂತನವಾಗಿ ನಿರ್ಮಾಣವಾದ ಅಭಿಲೇಖಾಲಯ ಕಚೇರಿಯ ಕಟ್ಟಡವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ೩೦೦ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಯನ್ನ ಪುರಸಭಾ ವ್ಯಾಪ್ತಿಯಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ರೂಪಾಯಿ ೧೩೫ ಕೋಟಿ ವೆಚ್ಚದಲ್ಲಿ ಜಕ್ರಿಬೆಟ್ಟುವಿನಲ್ಲಿ ಸೇತುವೆ ಹಾಗೂ ಅಣೆಕಟ್ಟು ನಿರ್ಮಾಣ ಕಾಮಗಾರಿ ವೇಗ ಪಡೆದಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಪುರಸಭಾ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ತಿಳಿಸಿದರು. ೪೦.೧೬ ಕೋಟಿ ರೂಪಾಯಿ ವೆಚ್ಚದಲ್ಲಿ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ. ಇದರ ಜೊತೆಗೆ ಅಂದಾಜು ೫೪ ಕೋಟಿ ರೂಪಾಯಿಗೂ ಮಿಕ್ಕಿದ ಯುಜಿಡಿ ಯೋಜನೆ ಕಾಮಗಾರಿ ಟೆಂಡರ್ ಹಂತದಲ್ಲಿದೆ, ಸಣ್ಣ ಪುಟ್ಟ ಸಮಸ್ಯೆಗಳನ್ನು ನಿವಾರಿಸಿಕೊಂಡು ಶೀಘ್ರವಾಗಿ ಕಾಮಗಾರಿ ನಡೆಯಲಿದೆ ಎಂದ ಅವರು ಪುರಸಭಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇನೆ ಎಂದು ಅವರು ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ನೀಡುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.
ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಪುರಸಭಾ ಜನಪ್ರತಿನಿಧಿಗಳ ವಾರ್ಡ್ ಅಭಿವೃದ್ಧಿ ಗೆ ಶಾಸಕರು ಹೆಚ್ಚಿನ ಅನುದಾನ ನೀಡುವಂತೆ ಸದಸ್ಯರ ಪರವಾಗಿ ಶಾಸಕರಿಗೆ ಬೇಡಿಕೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಎರಡು ವರ್ಷಗಳಿಂದ ಅಭಿಲೇಖಾಲಯದ ಕೆಲಸ ನಿಧಾನವಾಗಿ ನಡೆಯುತ್ತಿದ್ದು ತಾನು ಅಧಿಕಾರ ವಹಿಸಿಕೊಂಡ ಬಳಿಕ ಸಂಬಂಧಪಟ್ಟವರಿಗೆ ಒತ್ತಡ ಹಾಕಿ ಕಾಮಗಾರಿ ಪೂರ್ಣಗೊಂಡು ಇಂದು ಶಾಸಕರಿಂದ ಉದ್ಘಾಟನೆಗೊಂಡಿದೆ. ಪುರಸಭೆಯ ಎಲ್ಲಾ ಸದಸ್ಯರ ಸಹಕಾರದಿಂದ ಈ ಕಾಮಗಾರಿ ಕಾರ್ಯಗತಗೊಂಡಿದೆ ಎಂದರು. ಪುರಸಭಾ ವ್ಯಾಪ್ತಿಯ ಕಸ ವಿಲೇವಾರಿ ಸಮಸ್ಯೆ ಪರಿಹರಿಸಲು ಸುಮಾರು ಒಂದೂವರೆ ಕೋಟಿ ರೂಪಾಯಿ ವೆಚ್ಚದ ವಾಹನಗಳನ್ನು ಖರೀದಿ ಮಾಡಲಾಗಿದೆ. ಮುಂದಿನ ತಿಂಗಳಿನಲ್ಲಿ ೨೫ ಲಕ್ಷ ರೂಪಾಯಿ ವೆಚ್ಚದಲ್ಲಿ ಬಿ.ಸಿ.ರೋಡಿನ ಹೃದಯ ಭಾಗದಲ್ಲಿ ಪಿಂಕ್ ಶೌಚಾಲಯವು ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಸದಸ್ಯರು ತಮ್ಮ ತಮ್ಮ ವಾರ್ಡಿನ ಸಮಸ್ಯೆಯನ್ನು ಪರಿಹರಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಜೆಸಿಂತ ಡಿಸೋಜಾ, ಮುಖ್ಯಾಧಿಕಾರಿ ಎಂ. ಆರ್. ಸ್ವಾಮಿ. ಪುರಸಭಾ ಸದಸ್ಯರು, ನಾಮನಿರ್ದೇಶನ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.