
ಬಂಟ್ವಾಳ: ದೇವರ ಭಕ್ತಿ ಜೊತೆಗೆ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ನಮಗೆ ಪುಣ್ಯ ಪ್ರಾಪ್ತಿ ಮತ್ತು ಜೀವನ ಪಾವನವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಯೋಜನಾಧಿಕಾರಿ ಜಯಾನಂದ ಪಿ. ಹೇಳಿದ್ದಾರೆ. ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ಸಂಜೆ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಯೋಜನೆ ಮೇಲ್ವಿಚಾರಕಿ ಸುಜಾತ, ಕಾಡಬೆಟ್ಟು ಸೇವಾಪ್ರತಿನಿಧಿ ರೇಖಾ, ಕೊಡಂಬೆಟ್ಟು ಸೇವಾಪ್ರತಿನಿಧಿ ಮೋಹನದಾಸ ಗಟ್ಟಿ, ವಲಯಾಧ್ಯಕ್ಷ ಉಮೇಶ್ ಅನಿಸಿಕೆ ವ್ಯಕ್ತಪಡಿಸಿದರು. ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ಸ್ವಾಗತಿಸಿ, ಅಭಿಷೇಕ್ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.
