ಬಂಟ್ವಾಳ: ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಶ್ರೀಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಜಾತ್ರೋತ್ಸವ ಕಾರ್ಯಕ್ರಮಗಳು ಫೆ.22ರಿಂದ 28ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್ ಮಾಹಿತಿ ನೀಡಿ, ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಫೆ.22ರಂದು ಮಧ್ಯಾಹ್ನ 2 ಗಂಟೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿನ ಸಂಗ್ರಹಣಾ ಕೇಂದ್ರದಿಂದ ಹೊರೆಕಾಣಿಕೆ ಮರೆವಣಿಗೆ ಆರಂಭಗೊಂಡು ಕೈಕಂಬದ ಸಂಗ್ರಹಣ ಕೇಂದ್ರದವರೆಗೆ ಸಾಗಿ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಬರಲಿದೆ. ಅದೇ ದಿನ ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಚಾಲನೆ ನೀಡಲಿದ್ದಾರೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಜನೆ, ಯಕ್ಷಗಾನ, ತಾಳಮದ್ದಲೆ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದರು.
ಫೆ. 25ರಂದು ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಸಚಿವ ಸುನಿಲ್ ಕುಮಾರ್, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಫೆ.26ರಂದು ಧಾರ್ಮಿಕ ಸಭೆಯಲ್ಲಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮತ್ತು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮುಖರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮತ್ತಿತರರು ಭಾಗವಹಿಸುವರು. ಫೆ.27ರಂದು ಸೋಮವಾರ ಬೆಳಿಗೆ 10.30ಕ್ಕೆ ಬ್ರಹ್ಮಕುಂಭಾಭಿಷೇಕ ನಡೆಯಲಿದ್ದು, ರಾತ್ರಿ ದರ್ಶನ ಬಲಿ, ವಿಶೇಷ ನರ್ತನ ಬಲಿ ನಡೆಯಲಿವೆ. ಫೆ. 28ರಂದು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು.
ಸುದಿಗೋಷ್ಟಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದಿರೇಶ್, ಜೊತೆ ಕಾರ್ಯದರ್ಶಿಗಳಾದ ಐತಪ್ಪ ಪೂಜಾರಿ, ಶಂಕರ ಶೆಟ್ಟಿ ನಡ್ಯೋಡಿಗುತ್ತು, ಕೋಶಾಧಿಕಾರಿ ಎಚ್.ಸಂಕಪ್ಪ ಶೆಟ್ಟಿ, ಸ್ವಾಗತ ಸಮಿತಿ ಸಂಚಾಲಕ ಸತೀಶ್ ಭಂಡಾರಿ, ಹೊರೆಕಾಣಿಕೆ ಸಮಿತಿ ಸಂಚಾಲಕ ಕೃಷ್ಣಪ್ಪ ಬಿ.ಕಲ್ಲಡ್ಕ, ವಿವಿಧ ಸಮಿತಿ ಪ್ರಮುಖರಾದ ಬಿ.ಮೋಹನ್, ರಮೇಶ್ ಶೆಟ್ಟಿ, ಪುಷ್ಪರಾಜ ಶೆಟ್ಟಿ, ಜಯರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.