ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು.
ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ ಫೆ.21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲೆ ತಾಲ್ಲೂಕು ಯೋಜನೆ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾ. 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರಕಾರಿ ನೌಕರರ ವೇತನ-ಭತ್ಯೆಗಳು ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದೇ ಇರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 1.7.2022ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಅಧಿಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾ. 1 ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ಕ್ಕೆ ಕರೆ ನೀಡಲು ನಿರ್ಣಯಕೈಗೊಂಡಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 1.7.2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.೪೦% ಫಿಟ್ಮೆಂಟ್ ಸೌಲಭ್ಯವನ್ನು 1.7.2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು, ರಾಜ್ಯದ ಎನ್.ಪಿ.ಎಸ್.ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಸಂಘದ ಪ್ರಮುಖ ಬೇಡಿಕೆಯಾಗಿದ್ದು ಬಂಟ್ವಾಳ ತಾಲೂಕು ಎಲ್ಲಾ ಸರ್ಕಾರಿ ಅಧಿಕಾರಿ- ನೌಕರರಲ್ಲಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ತುಂಬೆ, ಕೋಶಾಧಿಕಾರಿ ಬಸಯ್ಯ ಅಲಿಮಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ಜನಾರ್ದನ್, ಪ್ರಮುಖರಾದ ಜೋಯಲ್ ಲೋಬೋ, ಯತೀಶ್ ಪಿ., ರತ್ನಾವತಿ ಪಿ., ಇಂದು ಶೇಖರ್, ಪುಟ್ಟ ರಂಗನಾಥ್, ಬಸವರಾಜು, ಮುಸ್ತಾಫ, ಜನಾರ್ದನ ಉಪಸ್ಥಿತರಿದ್ದರು.